ಬುಧವಾರ, ಫೆಬ್ರವರಿ 1, 2017

ಮೊಬೈಲ್ ಸಿಗ್ನಲ್ ಸಿಗ್ತಿಲ್ವಾ?

ಟಿ. ಜಿ. ಶ್ರೀನಿಧಿ

"ಮೊಬೈಲಿನಲ್ಲಿ ಸಿಗ್ನಲ್ ಇಲ್ಲ" - ಇದು ಈಚಿನ ದಿನಗಳಲ್ಲಿ ನಮಗೆ ವ್ಯಾಪಕವಾಗಿ ಕೇಳಿಬರುತ್ತಿರುವ ದೂರು. ಮೊಬೈಲ್ ಪರದೆಯ ಬಲಭಾಗದ ಮೇಲ್ತುದಿಯಲ್ಲಿ ಕಾಣಿಸುವ ಸಣ್ಣ ಗೆರೆಗಳು ಮೊಬೈಲ್ ಸಂಕೇತದ ಶಕ್ತಿ ಎಷ್ಟಿದೆಯೆಂದು ತಿಳಿಸುತ್ತವೆ ಎನ್ನುವುದು ನಮಗೆ ಗೊತ್ತು. ಅಲ್ಲಿ ಹೆಚ್ಚು ಗೆರೆಗಳಿದ್ದರೆ ನಮ್ಮ ಮೊಬೈಲಿಗೆ ಸಿಗುತ್ತಿರುವ ಸಂಕೇತದ ಶಕ್ತಿ (ಸಿಗ್ನಲ್ ಸ್ಟ್ರೆಂಥ್) ತೃಪ್ತಿಕರವಾಗಿದೆ ಎಂದು ಅರ್ಥ. ಹಾಗಿದ್ದಾಗ ಮೊಬೈಲ್ ಕರೆ ಮಾಡುವುದು, ಇಂಟರ್‌ನೆಟ್ ಬಳಸುವುದೆಲ್ಲ ಸರಾಗ. ಕಾಣಿಸುವ ಗೆರೆಗಳ ಸಂಖ್ಯೆ ಕಡಿಮೆಯಾದಷ್ಟೂ ಸಂಕೇತದ ಶಕ್ತಿ ಕಡಿಮೆಯಾಗಿದೆ ಎಂದು ತಿಳಿದುಕೊಳ್ಳಬಹುದು.

ಮೊಬೈಲ್ ಸಂಕೇತದ ಶಕ್ತಿಯನ್ನು ಡಿಬಿಎಂ (dBm) ಎಂಬ ಏಕಮಾನದಲ್ಲಿ ಅಳೆಯಲಾಗುತ್ತದೆ. ಡಿಬಿಎಂ ಎನ್ನುವುದು ಡೆಸಿಬಲ್-ಮಿಲಿವ್ಯಾಟ್ಸ್ ಎಂಬ ಹೆಸರಿನ ಹ್ರಸ್ವರೂಪ. ಮೊಬೈಲಿನ ಸೆಟಿಂಗ್ಸ್‌ಗೆ ಹೋದರೆ ಸದ್ಯ ನಮಗೆ ದೊರಕುತ್ತಿರುವ ಸಿಗ್ನಲ್ ಸ್ಟ್ರೆಂಥ್ ಎಷ್ಟು ಎಂದು ತಿಳಿದುಕೊಳ್ಳಬಹುದು (ಆಂಡ್ರಾಯ್ಡ್‌ನಲ್ಲಿ ಅಬೌಟ್ > ಸ್ಟೇಟಸ್ > ಸಿಮ್ ಸ್ಟೇಟಸ್).

ಈ ಸಂಖ್ಯೆ ಸಾಮಾನ್ಯವಾಗಿ ಋಣಾತ್ಮಕವಾಗಿರುತ್ತದೆ (ನೆಗೆಟಿವ್). ಇದು ಸೊನ್ನೆಗೆ ಸಮೀಪವಿದ್ದಷ್ಟೂ (-೬೦, -೮೦, -೯೦ ಹೀಗೆ) ಮೊಬೈಲ್ ಸಂಕೇತ ಸಾಕಷ್ಟು ಶಕ್ತಿಶಾಲಿಯಾಗಿದೆ ಎಂದರ್ಥ. -೧೦೦ ಅಥವಾ ಅದಕ್ಕೂ ಕಡಿಮೆಯಾದಾಗ (-೧೧೦, -೧೨೦ ಹೀಗೆ) "ಮೊಬೈಲಿನಲ್ಲಿ ಸಿಗ್ನಲ್ ಇಲ್ಲ"ವೆಂದು ದೂರುವ ಪರಿಸ್ಥಿತಿ ಬರುತ್ತದೆ!

ಅಂದಹಾಗೆ ಮೊಬೈಲ್ ಸಿಗ್ನಲ್ ಸಿಗದೆ ಇರುವುದರ ಹಿನ್ನೆಲೆಯಲ್ಲಿ ನಾವು ಎರಡು ಸಂಗತಿಗಳನ್ನು ಗಮನಿಸಬೇಕು - ಒಂದು, ಮೊಬೈಲ್ ಜಾಲದ ಪ್ರಸಾರ ವ್ಯಾಪ್ತಿ (ಕವರೇಜ್) ಮತ್ತು ಇನ್ನೊಂದು, ಅದರ ಧಾರಣಶಕ್ತಿ (ಕೆಪ್ಯಾಸಿಟಿ).

ಮೊಬೈಲ್ ಜಾಲದ ಸಂಕೇತಗಳು (ಸಿಗ್ನಲ್) ಯಾವೆಲ್ಲ ಪ್ರದೇಶಗಳನ್ನು ತಲುಪಬಲ್ಲವು ಎನ್ನುವುದನ್ನು ಅದರ ಪ್ರಸಾರ ವ್ಯಾಪ್ತಿ ಸೂಚಿಸುತ್ತದೆ. ಪಕ್ಕದೂರಿನಲ್ಲಿರುವ ಮೊಬೈಲ್ ಟವರಿನ ಕವರೇಜ್ ನಮ್ಮ ಹಳ್ಳಿಯವರೆಗೆ ಮಾತ್ರ ಇದೆ ಎನ್ನುವುದಾದರೆ ನಮ್ಮೂರ ಪಕ್ಕದ ಇನ್ನೊಂದು ಹಳ್ಳಿಯಲ್ಲಿ ಮೊಬೈಲ್ ಬಳಸುವುದು ಸಾಧ್ಯವಾಗುವುದಿಲ್ಲ.

ಯಾವುದೇ ಮೊಬೈಲ್ ಜಾಲ ನಿರ್ದಿಷ್ಟ ಸಮಯದಲ್ಲಿ ಎಷ್ಟು ಕರೆಗಳನ್ನು, ಎಷ್ಟು ಪ್ರಮಾಣದ ದತ್ತಾಂಶ (ಡೇಟಾ) ವಿನಿಮಯವನ್ನು ನಿಭಾಯಿಸಬಲ್ಲದು ಎಂಬುದನ್ನು ಸೂಚಿಸುವುದು ಅದರ ಧಾರಣಶಕ್ತಿ. ಇದು ಆ ಸ್ಥಳದಲ್ಲಿ ಮೊಬೈಲ್ ಜಾಲದ ಪ್ರಸಾರ ವ್ಯಾಪ್ತಿ ಹೇಗಿದೆ ಎನ್ನುವುದರ ಮೇಲೂ ಅವಲಂಬಿತವಾಗಿರುತ್ತದೆ.

ನಾವಿರುವ ಪ್ರದೇಶ ಮೊಬೈಲ್ ಜಾಲದ ಪ್ರಸಾರ ವ್ಯಾಪ್ತಿಯ ಅಂಚಿನಲ್ಲೋ, ಹೊರಗೋ ಇದ್ದರೆ ಕರೆಮಾಡಲು - ಅಂತರಜಾಲ ಸಂಪರ್ಕ ಬಳಸಲು ಕಷ್ಟವಾಗುತ್ತದೆ. ನಮ್ಮಲ್ಲಿ ಕವರೇಜ್ ಚೆನ್ನಾಗಿದ್ದರೂ ಮೊಬೈಲ್ ಬಳಸುತ್ತಿರುವವರ ಸಂಖ್ಯೆ ವಿಪರೀತ ಜಾಸ್ತಿಯಿದ್ದರೆ (ಕೆಪ್ಯಾಸಿಟಿ ಪೂರ್ಣವಾಗಿ ಬಳಕೆಯಾಗುತ್ತಿದ್ದರೆ) ಆಗಲೂ ಕರೆಮಾಡಲು - ಅಂತರಜಾಲ ಸಂಪರ್ಕ ಬಳಸಲು ಪರದಾಡುವ ಪರಿಸ್ಥಿತಿ ಬರುವ ಸಾಧ್ಯತೆಯಿದೆ.

ಜೂನ್ ೧೪ ಹಾಗೂ ಡಿಸೆಂಬರ್ ೧೯, ೨೦೧೬ರ ವಿಜಯವಾಣಿಯಲ್ಲಿ ಪ್ರಕಟವಾದ ಲೇಖನಗಳ ಸಂಯುಕ್ತರೂಪ

1 ಕಾಮೆಂಟ್‌:

B P Bhat ಹೇಳಿದರು...

Thanks for the explanation. It was really nice.

I have one doubt. Whenever we go to some far off places, say villages, then we get signal connectivity in normal (feature) phones; but we don't get signal connectivity in smartphones.

Why is it like that? In general, one will be thinking that, because it is a high-end smartphone, the connectivity must be better than a low-end feature phone. But it is the other way round. Can you explain this point also.

-----

Keep writing and keep up the good work.

badge